ಲಾರಿಗೆ ಕಾರು ಡಿಕ್ಕಿ ನಾಲ್ವರ ಸಾವು
ಮಂಡ್ಯ: ಎಂ ಸ್ಯಾಂಡ್ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಮೃತಪಟ್ಟ ಘಟನೆ ನಾಗಮಂಗಲ ತಾಲ್ಲೂಕು ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ, ತಿರುಮಲಾಪುರ ಗ್ರಾಮದ ಬಳಿ ಭಾನುವಾರ ನಸುಕಿನಲ್ಲಿ ನಡೆದಿದೆ.
ಮೃತರಲ್ಲಿ ಮಾಗಡಿ ತಾಲ್ಲೂಕು ಲಕ್ಕೇನಹಳ್ಳಿ ಗ್ರಾಮದ ಹೇಮಂತ್ (24), ಶರತ್ (28) ಗುರುತು ಪತ್ತೆಯಾಗಿದೆ, ಇನ್ನಿಬ್ಬರ ಗುರುತು ಪತ್ತೆಯಾಗಿಲ್ಲ. ಲಾರಿ ಎಂ ಸ್ಯಾಂಡ್ ತುಂಬಿಕೊಂಡು ಚನ್ನರಾಯಪಟ್ಟಣಕ್ಕೆ ತೆರಳುತ್ತಿತ್ತು. ಹಿಂದಿನಿಂದ ವೇಗವಾಗಿ ಬಂದ ಶೆವರ್‌ಲೆಟ್ ಸ್ಪಾರ್ಕ್ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ, ಕಾರ್‌ನಲ್ಲಿದ್ದ ಎಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತದೇಹಗಳನ್ನು ಬಿ.ಜಿ ನಗರದ ಆದಿಚುಂಚನಗಿರಿ ಆಸ್ಪತ್ರೆಯಲ್ಲಿಡಲಾಗಿದೆ. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.