ಬಾಳ್ಳುಪೇಟೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ಮಾದಕ ದ್ರವ್ಯ ವಿರೋಧಿ ದಿನಾಚರಣೆ
ಸಕಲೇಶಪುರ : ಅಮಲು ಬರಿಸುವ ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತನ್ನ ಜೀವವನ್ನೇ ಕಳೆದುಕೊಳ್ಳುತ್ತಾನೆ ಹಾಗೂ ಆರ್ಥಿಕವಾಗಿ ದಿವಾಳಿ ಕೂಡ ಆಗುತ್ತಾನೆ. ಇದರಿಂದ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಸಮಾಜ ಮಾದವ ವಸ್ತುಗಳಿಂದ ಮುಕ್ತವಾಗಿರಬೇಕು. ಮಾದಕ ವಸ್ತುಗಳ ಬಳಕೆ ಹಾಗೂ ಅಕ್ರಮ ಸಾಗಣೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಜಾಗತಿಕವಾಗಿ ಅರಿವು ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್ 26ರಂದು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನವನ್ನು ಆಚರಿಸಲಾಗುತ್ತದೆ ಎಂದು ಗ್ರಾಮಾಂತರ ಪೊಲೀಸ್ ಠಾಣೆಯ ಕ್ರೈಂ ಪಿಎಸ್ಐ ಖತಿಜಾ ಹೇಳಿದರು.
ಮಂಗಳವಾರ ತಾಲೂಕಿನ ಬಾಳ್ಳುಪೇಟೆಯಲ್ಲಿ ಆಟೋ ಮಾಲೀಕರ ಹಾಗೂ ಚಾಲಕರ ಸಂಘ ಸೇರಿದಂತೆ ಸಾರ್ವಜನಿಕರಿಗೆ ಮಾದಕ ದ್ರವ್ಯ ಬಳಕೆ ಕುರಿತು ಮಾತನಾಡಿದ ಅವರು ವಿಶ್ವದಾದ್ಯಂತ ಈ ದುಶ್ಚಟಗಳಿಗೆ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ. ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣೆ ಕಾನೂನ ಬಾಹಿರ ಎಂದು ಗೊತ್ತಿದ್ದರೂ ಇದರ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಡ್ರಗ್ ಮಾಫಿಯಾ ಹತೋಟಿಗೆ ತರಲು ವಿಶ್ವದೆಲ್ಲೆಡೆ ಕಾನೂನು ಪ್ರಯತ್ನಗಳು ನಡೆಯುತ್ತಿವೆ. ಆದರೆ ಇದನ್ನು ಬುಡ ಸಮೇತ ಕಿತ್ತು ಹಾಕಲು ಸಾಧ್ಯವಾಗಿಲ್ಲ. ಪ್ರತಿಯೊಬ್ಬ ನಾಗರಿಕನೂ ಈ ಬಗ್ಗೆ ಜಾಗೃತಿ ಹೊಂದಿ ವಿಶ್ವವನ್ನು ಮಾದಕವಸ್ತುಗಳಿಂದ ಮುಕ್ತವಾಗಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕಿದೆ ಎಂದರು.
ಈ ವೇಳೆ ಬಾಳ್ಳುಪೇಟೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸೋಮೇಗೌಡ ಕಾರ್ಯದರ್ಶಿ ಶೇಖರ್ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ವೆಂಕಟೇಶ್, ಶಿವಕುಮಾರ್ ಸೇರಿದಂತೆ ಮುಂತಾದವರಿದ್ದರು.