Sunday, November 24, 2024
Homeಸುದ್ದಿಗಳುಸಕಲೇಶಪುರಸಕಲೇಶಪುರ: ವಿದ್ಯಾರ್ಥಿ ವೇತನ ಬಿಡುಗಡೆಗೆ ಎಬಿವಿಪಿ ಅಗ್ರಹ

ಸಕಲೇಶಪುರ: ವಿದ್ಯಾರ್ಥಿ ವೇತನ ಬಿಡುಗಡೆಗೆ ಎಬಿವಿಪಿ ಅಗ್ರಹ

ಸಕಲೇಶಪುರ: ವಿದ್ಯಾರ್ಥಿ ವೇತನ ಬಿಡುಗಡೆಗೆ ಎಬಿವಿಪಿ ಅಗ್ರಹ

ಸಕಲೇಶಪುರ: ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡದೆ, ಶಿಕ್ಷಣದಿಂದ ವಂಚಿತರಾಗುವಂತೆ ಮಾಡುತ್ತಿರುವ ರಾಜ್ಯ ಸರ್ಕಾರ ಕೂಡಲೇ ೨೦೨೨-೨೩ ಸಾಲಿನ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕದಿಂದ ಮಿನಿ ವಿಧಾನಸೌಧದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ನಂತರ ಮಾಧ್ಯಮದೊಂದಿಗೆ ಮಾತನಾಡಿದ ಕಾರ್ಯಕರ್ತರು,ದೇಶದಲ್ಲಿಯೇ ನಮ್ಮ ಕರ್ನಾಟಕವು ಉತ್ತಮವಾದ ಶಿಕ್ಷಣ, ಶಿಕ್ಷಣ ವ್ಯವಸ್ಥೆ ಹಾಗೂ ಉತ್ಕೃಷ್ಟ ಮಟ್ಟದ ವಿಶ್ವವಿದ್ಯಾಲಯಗಳಿಂದ ಹೆಸರುವಾಸಿಯಾಗಿ, ಸಾವಿರಾರು ಹೊರರಾಜ್ಯದ ವಿದ್ಯಾರ್ಥಿಗಳು ಕರ್ನಾಟಕವನ್ನು ಶಿಕ್ಷಣಕ್ಕಾಗಿ ಅರಸಿ ಬರುತ್ತಿರುವುದು ನಮ್ಮ ರಾಜ್ಯದ ಹೆಮ್ಮೆಯಾಗಿದೆ. ಆದರೆ ಉನ್ನತ ಶಿಕ್ಷಣದ ಆಸೆಯನ್ನು ಇಟ್ಟುಕೊಂಡ ರಾಜ್ಯದ ಅದೆಷ್ಟೋ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಸರ್ಕಾರ ನಮ್ಮ ನೆರವಿಗೆ ಧಾವಿಸುತ್ತದೆ. ನಮಗೆ ಆರ್ಥಿಕ ಬೆಂಬಲವನ್ನು ವಿದ್ಯಾರ್ಥಿ ವೇತನದ ರೂಪದಲ್ಲಿ ನೀಡುತ್ತದೆ ಎಂದು ಕಾಲೇಜುಗಳಿಗೆ ದಾಖಲಾಗುತ್ತಾರೆ. ಆದರೆ ರಾಜ್ಯ ಸರ್ಕಾರ ಶಿಕ್ಷಣಕ್ಕೆ ನೀಡ ಬೇಕಾದ ಪ್ರಾಮುಖ್ಯತೆಯನ್ನು ನೀಡದೆ ಇರುವುದು. ವಿದ್ಯಾರ್ಥಿವೇತನದಲ್ಲೂ ರಾಜಕೀಯವನ್ನು ಮುಂದುವರಿಸುತ್ತಿರುವುದು ಈ ರಾಜ್ಯದ ವಿದ್ಯಾರ್ಥಿಗಳ ಶೋಚನೀಯ ಸ್ಥಿತಿಗೆ ಕಾರಣವಾಗಿದೆ ಎಂದು ಆರೋಪಿಸಿದರು.

ಎಸ್‌ಎಸ್‌ಪಿ ತಂತ್ರಾಂಶದ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಯುಷ್‌ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಹಾಗೂ ಇತರ ಇಲಾಖೆಗಳ ಅಡಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಪದವಿ ಮತ್ತು ಸ್ನಾತ್ತಕೋತ್ತರ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸುತ್ತಾರೆ. ಆದರೆ ರಾಜ್ಯ ಸರ್ಕಾರ ಸರಿಯಾದ ಸಮಯಕ್ಕೆ ವಿದ್ಯಾರ್ಥಿವೇತನವನ್ನು ನೀಡದೆ ಲಕ್ಷಾಂತರ ವಿದ್ಯಾರ್ಥಿಗಳ ಶಿಕ್ಷಣವನ್ನು ಅತಂತ್ರ ಸ್ಥಿತಿಗೆ ತರುವ ಕೆಲಸವನ್ನು ಮಾಡಿದೆ.ರಾಜ್ಯದ ರೈತರ ಮಕ್ಕಳ ಶಿಕ್ಷಣಕ್ಕಾಗಿ ಹಿಂದಿನ ಸರ್ಕಾರ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನವನ್ನು ಪ್ರಾರಂಭಿಸಿತ್ತು. ಈ ವಿದ್ಯಾರ್ಥಿವೇತನವನ್ನು ಈಗಿನ ರಾಜ್ಯ ಸರ್ಕಾರ ತಡೆಹಿಡಿಯುವ ಕೆಲಸವನ್ನು ಮಾಡಿ ರೈತರ ಮಕ್ಕಳ ಶಿಕ್ಷಣವನ್ನು ಕಸಿದುಕೊಳ್ಳುವ ಕೆಲಸವನ್ನು ಮಾಡುತ್ತಿದೆ.

 ದೇಶದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿ ಮುಂದುವರಿಸದೆ ಇರಲು ಅತ್ಯಂತ ಪ್ರಮುಖವಾದ ಕಾರಣ ಅವರಿಗಿರುವ ಆರ್ಥಿಕ ಸಮಸ್ಯೆ. ವಿದ್ಯಾರ್ಥಿಗಳಿಗಾಗುವ ಆರ್ಥಿಕ ಸಮಸ್ಯೆಯನ್ನು ಹೋಗಲಾಡಿಸುವ ದೃಷ್ಟಿಯಿಂದ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗೆ ನೀಡಿ ಅವರ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ರಾಜ್ಯ ಸರ್ಕಾರ 2022-23ನೇ ಸಾಲಿನಲ್ಲಿ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಂಜೂರಾದ ವಿದ್ಯಾರ್ಥಿ ವೇತನ ತಡೆ ಹಿಡಿದು ಆ ಹಣವನ್ನು ಇನ್ನಿತರ ಕಾರ್ಯಗಳಿಗಾಗಿ ಬಳಸುತ್ತಿರುವ ಕ್ರಮವನ್ನು ಅ.ಭಾ.ವಿ.ಪ ಖಂಡಿಸುತ್ತದೆ.

 

ರಾಜ್ಯದಲ್ಲಿ 4 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಇಂದು ರಾಜ್ಯ ಸರ್ಕಾರ 2022-23 ನೇ ಸಾಲಿನ ವಿದ್ಯಾರ್ಥಿ ವೇತನವನ್ನು ತಡೆ ಹಿಡಿದಿದೆ. SSP ತಂತ್ರಾಂಶದಲ್ಲಿ ವಿದ್ಯಾರ್ಥಿವೇತನ ಮಂಜೂರಾಗಿರುವುದಾಗಿ ತೋರಿಸಿದ್ದರು. ವಿದ್ಯಾರ್ಥಿಗಳ ಖಾತೆಗೆ ಹಣ ಜಮಾವಾಗಿರುವುದಿಲ್ಲ. ಹಣ ಜಮಾವಾಗುವ ಮೊದಲೇ ಮುಂದಿನ ಶೈಕ್ಷಣಿಕ ಸಾಲಿನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿರುವುದು ವಿದ್ಯಾರ್ಥಿಗಳಿಗೆ ಗೊಂದಲವನ್ನು ಉಂಟುಮಾಡಿದ್ದು ಈ ಕೂಡಲೇ ರಾಜ್ಯ ಸರ್ಕಾರ ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳಿಗೆ ನೀಡಿ, ಶಿಕ್ಷಣದಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ವಂಚಿತರಾಗಿವುದನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು.

 ಪ್ರತಿಭಟನೆಯ ನಂತರ ತಾಲೂಕು ಗ್ರೇಟ್ -2 ತಹಶೀಲ್ದಾರ್ ಮೋಹನ್ ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಬಿವಿಪಿ ಕಾರ್ಯಕರ್ತರಾದ ಸುಶ್ಮಿತ,ಪ್ರೀತಿ, ಅಭಿಷೇಕ್, ಸಂಜನಾ,ವಿಲ್ಸನ್,ರೋಷನ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು

RELATED ARTICLES
- Advertisment -spot_img

Most Popular