ಎಸ್ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ.
ಬೆಂಗಳೂರು, ಅಕ್ಟೋಬರ್ 24: ಕರ್ನಾಕಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸುವ ಬಗ್ಗೆ ನ್ಯಾಯಮೂರ್ತಿ ನಾಗ ಮೋಹನದಾಸ ಶಿಫಾರಸ್ಸಿಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿರುವುದು ಸಂತಸದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಎಸ್ಸಿ, ಎಸ್ಟಿಗೆ ಮೀಸಲಾತಿ ಹೆಚ್ಚಿಸುವಂತೆ ಮಾಡಿದ್ದ ಶಿಫಾರಸ್ಸನ್ನು ಒಪ್ಪಿಕೊಂಡಿದ್ದ ರಾಜ್ಯ ಸಚಿವ ಸಂಪುಟದ ತೀರ್ಮಾನದ ಬಗ್ಗೆ ಎಲ್ಲರಿಗೂ ಗೊತ್ತಿದೆ. ಇದಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಿಎಂ ತಿಳಿಸಿದರು.
ಈ ಕುರಿತು ಅಧಿಕೃತವಾದ ವಿಶೇಷ ರಾಜ್ಯಪತ್ರವನ್ನು ಪ್ರಕಟಿಸಲಾಗಿದೆ. ಇದರಿಂದ ಇನ್ನು ಮುಂದೆ ಅನುಸೂಚಿತ ಜಾತಿಯ ಮೀಸಲಾತಿ ಪ್ರಮಾಣ 15 ರಿಂದ 17ಕ್ಕೆ ಏರಿಕೆಯಾಗಲಿದ್ದು, ಅನುಸೂಚಿತ ಪಂಗಡಗಳ ಮೀಸಲಾತಿ ಪ್ರಮಾಣ ಶೇ.3 ರಿಂದ 7ಕ್ಕೆ ಹೆಚ್ಚಳವಾಗಲಿದೆ.
ಎಸ್ಸಿ, ಎಸ್ಟಿ ಸಮುದಾಯಕ್ಕೆ ದೀಪಾವಳಿ ಕೊಡುಗೆ:
ನಮ್ಮ ಸರ್ಕಾರವು ಮೀಸಲಾತಿ ಪ್ರಮಾಣ ಹೆಚ್ಚಿಸಿ ಬದ್ದತೆಯಿಂದ ನಡೆದುಕೊಂಡಿದೆ. ಈ ಮೂಲಕ ಅನುಸೂಚಿತ ಜಾತಿ ಮತ್ತು ಪಂಗಡಗಳ ಜನಾಂಗಕ್ಕೆ ಬಿಜೆಪಿ ಸರ್ಕಾರವು ದೀಪಾವಳಿ ಕೊಡುಗೆ ಕೊಟ್ಟಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕಿರುವ ಘನವೆತ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಈ ಆಧ್ಯಾದೇಶಕ್ಕೆ ವಿಧಾನ ಮಂಡಲದ ಎರಡೂ ಸದನದಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.