ನ್ಯಾಯಮೂರ್ತಿ ಧನಂಜಯ ಯಶವಂತ್ ಚಂದ್ರಚೂಡ್ ಅವರು ಇಂದು ಭಾರತದ ಸುಪ್ರೀಂ ಕೋರ್ಟ್‌ನ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಲಿದ್ದಾರೆ. ಚಂದ್ರಚೂಡ್ ಅವರು ಎರಡು ವರ್ಷಗಳ ಕಾಲ ನವೆಂಬರ್ 10, 2024 ರವರೆಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ.
ಅಯೋಧ್ಯೆ, ಶಬರಿಮಲೆ, ಸೆಕ್ಷನ್ 377, ಗರ್ಭಪಾತ ಮತ್ತಿತರ ಪ್ರಕರಣಗಳಲ್ಲಿ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಐತಿಹಾಸಿಕ ತೀರ್ಪು ನೀಡಿದ್ದಾರೆ. ಮೇ 13, 2016 ರಂದು ಸುಪ್ರೀಂ ಕೋರ್ಟ್‌ನಲ್ಲಿ ಪದೋನ್ನತಿ ಪಡೆದು ಮೊದಲ ಬಾರಿಗೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡರು. ಸುಪ್ರೀಂ ಕೋರ್ಟ್‌ಗೂ ಮೊದಲು ಅಲಹಾಬಾದ್ ಮತ್ತು ಮುಂಬೈ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದರು. 1998-2000 ವರೆಗೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಸೇವೆ ಸಲ್ಲಿಸಿದರು. ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶವನ್ನು ಅನುಮತಿಸಿದರು.
ನ್ಯಾಯಮೂರ್ತಿ ಚಂದ್ರಚೂಡ್ ಅವರ ತಂದೆ ವೈ.ವಿ. ಚಂದ್ರಚೂಡ್ ಅವರು ಈ ಹಿಂದೆ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಸುದೀರ್ಘ ಸೇವೆ ಸಲ್ಲಿಸಿದ್ದರು. ಫೆಬ್ರವರಿ 2, 1978 ರಿಂದ ಜುಲೈ 11, 1985 ರವರೆಗೆ 16 ನೇ ಸಿಜೆಐ ಆಗಿ ಸೇವೆ ಸಲ್ಲಿಸಿದರು. ಡಿ.ವೈ.ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಈಗಾಗಲೇ ಹಲವು ಮಹತ್ವದ ತೀರ್ಪು ನೀಡಿದ್ದಾರೆ.