ಎಸ್.ಸಿ, ಎಸ್.ಟಿ ಮೀಸಲಾತಿ ಹೆಚ್ಚಳ: ಸರ್ಕಾರದ ಮಹತ್ವದ ನಿರ್ಧಾರ.
ಬೆಂಗಳೂರು (07-10-2022): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ವರದಿ ಜಾರಿಯ ಕುರಿತು ಇಂದು ಮುಖ್ಯಮಂತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಯಾಯಿ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ವಿಧಾನ ಮಂಡಲದ ಉಭಯ ಸದನಗಳ ನಾಯಕರ ಸಭೆ ನಡೆಯಿತು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಹೆಚ್ಚಿಸಲು ನಾಗಮೋಹನ್ ದಾಸ್ ಸಮಿತಿ ಮಾಡಿರುವ ಶಿಫಾರಸ್ಸುಗಳನ್ನು ಜಾರಿಗೆ ತರಲು ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಅಂತಿಮವಾಗಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 15 ರಿಂದ 17 ರಷ್ಟಕ್ಕೆ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿಯನ್ನು ಶೇ 3 ರಿಂದ 7 ರಷ್ಟು ಹೆಚ್ಚಿಸಲು ನಿರ್ಧಾರಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ಪರಿಶಿಷ್ಟರ ಶಿಕ್ಷಣಕ್ಕಾಗಿ ಹಣ ಮೀಸಲಿಡಬೇಕು ಎಂಬ ಶಿಫಾರಸ್ಸನ್ನು ಸಹ ಜಾರಿ ಮಾಡಲು ಸರ್ಕಾರ ಒಪ್ಪಿದೆ ಎನ್ನಲಾಗುತ್ತಿದೆ. ಡಿಸೆಂಬರ್ ವೇಳೆಗೆ ಪರಿಷ್ಕೃತ ಮೀಸಲಾತಿ ಜಾರಿ ಬರಲಿದ್ದು, ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಾಧುಸ್ವಾಮಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಇಂದಿನ ಸರ್ವಪಕ್ಷ ಸಭೆಯಲ್ಲಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜೆ.ಡಿ.ಎಸ್. ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಸಚಿವರಾದ ಆರ್. ಅಶೋಕ್, ಜೆ . ಸಿ. ಮಾಧುಸ್ವಾಮಿ, ಗೋವಿಂದ ಕಾರಜೋಳ, ಆನಂದ್ ಸಿಂಗ್, ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಶಾಸಕರಾದ ಯು. ಟಿ. ಖಾದರ್, ಜೆ. ಡಿ.ಎಸ್. ಶಾಸಕಾಂಗ ಪಕ್ಷದ ನಾಯಕ ಭೋಜೇಗೌಡ, ಅಜಯ್ ಧರ್ಮ ಸಿಂಗ್, ಮುಖ್ಯ ಕಾರ್ಯದರ್ಶಿ ಶ್ರೀಮತಿ ವಂದಿತಾ ಶರ್ಮಾ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.