ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರೊಟೆಸ್ಟ್
ಪೋಲೀಸರ ಕ್ರಮಕ್ಕೆ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು ಅಸಮಾಧಾನ.
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮೈಸೂರು ಮುಡಾ ಹಗರಣಗಳ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಇಂದು ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ರಾಜ್ಯ ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಿಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಮುಖ್ಯಮಂತ್ರಿ ನಿವಾಸ ಕಾವೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಪ್ರತಿಭಟನಾಕಾರರು ಯತ್ನಿಸಿದಾಗ ಅವರನ್ನು ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ.
ಕಾವೇರಿ ಬಳಿಯೇ ಇರುವ ಕುಮಾರಕೃಪಾ ಅತಿಥಿಗೃಹದ ಬಳಿಯೇ ಪ್ರತಿಭಟನಾಕಾರರನ್ನು ತಡೆಯಲಾಯಿತು.
ಈ ವೇಳೆ ಮಾತನಾಡಿದ ಸಿಮೆಂಟ್ ಮಂಜು ರಾಜ್ಯ ಸರ್ಕಾರದ ಅಕ್ರಮಗಳ ಬಗ್ಗೆ ನಾವು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದರೆ ನಮ್ಮ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅಸಮಾಧಾನ ಹೊರ ಹಾಕಿದರು. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ನಡೆಸಲು ಎಲ್ಲರಿಗೂ ಹಕ್ಕಿದೆ ಆದರೆ ಈ ಕಾಂಗ್ರೆಸ್ ನಮ್ಮನ್ನು ಬಂಧನ ಮಾಡುವ ಮೂಲಕ ಈ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ತಳ್ಳಾಟ, ನೂಕಾಟವೂ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಪ್ರಮುಖರಾದ ಸಿಟಿ. ರವಿ, ಆರಗ ಜ್ಞಾನೇಂದ್ರ, ಅರವಿಂದ್ ಬೆಲ್ಲದ್, ಸುನೀಲ್ ಕುಮಾರ್, ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು ಮೊದಲಾದವರು ಪ್ರತಿಭಟನೆಯ ಮುಂಚೂಣಿಯಲ್ಲಿದ್ದರು.